ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಮಹಾನಗರ ಪಾಲಿಕೆಯ ಸಹಾಯಕ ಕಂದಾಯ ಅಧಿಕಾರಿಯೊಬ್ಬರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ.
ದಾವಣಗೆರೆ ಮಹಾನಗರ ಪಾಲಿಕೆಯ ಸಹಾಯಕ ಕಂದಾಯ ಅಧಿಕಾರಿ ಬಿ. ವಿನಾಯಕ ಅವರು ಉಪಚುನಾವಣೆಗೆ ನಿಯೋಜಿತ ಅಧಿಕಾರಿಗಳಿಗೆ ವಾಹನ ಹಂಚಿಕೆ ಮಾಡುವ ಜವಾಬ್ದಾರಿ ಹೊಂದಿದ್ದರು. 70 ವಾಹನಗಳನ್ನು ಹಂಚಿಕೆ ಮಾಡಿರುವುದಾಗಿ ಹೆಚ್ಚುವರಿ ಜಿಲ್ಲಾಧಿಕಾರಿಗೆ ಮಾಹಿತಿ ನೀಡಿದ್ದರೂ, ಸೆಕ್ಟರ್ ಅಧಿಕಾರಿಗಳಿಗೆ ವಾಹನಗಳನ್ನು ಏಕೆ ಹಂಚಿಕೆ ಮಾಡಿಲ್ಲ ಎಂಬುದಕ್ಕೆ ಅವರು ಸಮರ್ಪಕ ಉತ್ತರ ನೀಡಲು ವಿಫಲರಾಗಿದ್ದರು.
ಕರ್ತವ್ಯ ಲೋಪದ ಕುರಿತು ವಿನಾಯಕ ಅವರಿಗೆ ನೋಟಿಸ್ ನೀಡಲಾಗಿತ್ತು. ನೋಟಿಸ್‌ಗೆ ಅವರು ನೀಡಿದ ಉತ್ತರ ತೃಪ್ತಿಕರವಾಗಿಲ್ಲದ ಕಾರಣ, ಅವರ ವಿರುದ್ಧ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಚುನಾವಣಾ ಪ್ರಕ್ರಿಯೆಗಳಲ್ಲಿ ಯಾವುದೇ ಲೋಪಕ್ಕೆ ಅವಕಾಶವಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

